Breaking News

ಮೇ 3ರ ಪ್ರಧಾನಿ ಮೋದಿ ಸಮಾವೇಶಕ್ಕೆ ಎಲ್ಲ ಸಿದ್ದತೆ ಪೂರ್ಣ: ಸುದರ್ಶನ

 

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 3 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದು, ಮೂಲ್ಕಿ ಬಳಿ ಸಜ್ಜುಗೊಳಿಸಲಾದ ವಿಶಾಲ ಮೈದಾನದಲ್ಲಿ ಸಮಾವೇಶಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಘಟಕದ  ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಧಾನಿ ಮೋದಿ ಅವರ ಕಾರ್ಯಕ್ರಮವನ್ನು  ಯಶಸ್ವಿಗೊಳಿಸಲು ಪ್ರತಿ ಬೂತ್ ಮಟ್ಟದಲ್ಲಿ ಪೂರ್ವಭಾವಿ ಸಭೆಗಳು ನಡೆಸಲಾಗಿದೆ. ದ.ಕ ಮತ್ತು ಉಡುಪಿ ಜಿಲ್ಲೆಗಳ ಕಾರ್ಯಕರ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಎರಡೂ ಜಿಲ್ಲೆಗಳ ಮಧ್ಯ ಭಾಗ ಮೂಲ್ಕಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈಗಾಗಲೇ ವೇದಿಕೆ ಮತ್ತು ಪೆಂಡಾಲ್ ಕೆಲಸಗಳು ಮುಕ್ತಾಯದ ಹಂತದಲ್ಲಿದ್ದು, ವಾಹನಗಳ ಪಾರ್ಕಿಂಗ್ಗೆ ಸ್ಥಳಾವಕಾಶ ಒದಗಿಸಲಾಗಿದೆ. ಮಂಗಳವಾರ ಮಧ್ಯಾಹ್ನದೊಳಗೆ ಎಲ್ಲ ಕೆಲಸ ಪೂರ್ಣಗೊಂಡ ಬಳಿಕ ಕಾರ್ಯಕ್ರಮ ನಡೆಸುವ ಸ್ಥಳವನ್ನು ಭದ್ರತಾ ಸಿಬ್ಬಂದಿಗೆ ಬಿಟ್ಟು ಕೊಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ನವದೆಹಲಿಯಿಂದ ನೇರವಾಗಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಪ್ರಧಾನಿ ನರೇಂದ್ರ ಮೋದಿ ಅವರು ಬಜ್ಪೆಯಿಂದ ಹೆಲಿಕಾಪ್ಟರ್ ಮೂಲಕ ಸಮಾವೇಶದ ಸ್ಥಳಕ್ಕೆ ಆಗಮಿಸಲಿದ್ದಾರೆ. ಹೆಲಿಕಾಪ್ಟರ್ ಇಳಿಯಲು ಪಣಂಬೂರಿನ ಎನ್ಎಂಪಿಎ, ಸುರತ್ಕಲ್ನ ಎನ್ಐಟಿಕೆ, ಮೂಲ್ಕಿಯ ಸಮಾವೇಶದ ಸ್ಥಳದ ಪಕ್ಕದಲ್ಲಿ ಹೆಲಿಪ್ಯಾಡ್ಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.

  1.  

ಭದ್ರತಾ ಕಾರಣಗಳಿಂದಾಗಿ ಪ್ರಧಾನಿ ಆಗಮಿಸುವ ಹೊತ್ತಿಗೆ ಸಮಾವೇಶದ ಪರಿಸರದಲ್ಲಿ ಸಾರ್ವಜನಿಕರ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗುತ್ತದೆ. ಪ್ರಧಾನಿ ಸಾರ್ವಜನಿಕ ಸಭೆ ಬೆಳಿಗ್ಗೆ 10 ಗಂಟೆಗೆ ನಿಗದಿಯಾಗಿದೆ. ಕಾರ್ಯಕರ್ತರು, ಸಾರ್ವಜನಿಕರು ಬೆಳಿಗ್ಗೆ 9 ಗಂಟೆಯೊಳಗೆ ಸಮಾವೇಶದ ಸ್ಥಳಕ್ಕೆ ಆಗಮಿಸಬೇಕು. ಸಮಾವೇಶದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಗಳಿಂದ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದ್ದು, ಎರಡೂ ಜಿಲ್ಲೆಗಳ ಒಟ್ಟು 13 ಕ್ಷೇತ್ರಗಳ ಅಭ್ಯರ್ಥಿಗಳೂ ಹಾಜರಿರುತ್ತಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರಾವಳಿ ತಿಂಡಿ ತಿನಿಸುಗಳಾದ ಉಪ್ಪಿಟ್ಟು ಅವಲಕ್ಕಿ, ಮೂಡೆ, ನೀರ್ದೋಸೆ ಮುಂತಾದ ಬಗೆಯ ಖಾದ್ಯಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಪಕ್ಷದ ಮುಖಂಡ ಸಂಜಯ್ ಪ್ರಭು ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com