Breaking News

ಅಧಿಕಾರಿಗಳ ಉದಾಸೀನ ಭಾವನೆ ಸಹಿಸಲ್ಲ: ದಿನೇಶ್ ಗುಂಡೂರಾವ್

 

ಮಂಗಳೂರು: ಜನರ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಹೊಸ ಸರ್ಕಾರ ಜಾರಿಗೊಳಿಸುತ್ತಿರುವ ನೂತನ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ಪ್ರಾಮಾಣಿಕ ಕೆಲಸವನ್ನು ಅಧಿಕಾರಿಗಳು ಮಾಡುವ ಮೂಲಕ ಕರ್ತವ್ಯದಲ್ಲಿನ ತಮ್ಮ ಕಾರ್ಯದಕ್ಷತೆ ತೋರಬೇಕು. ಉದಾಸೀನ ಮನೋಭಾವ ಸಹಿಸಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ಅಧಿಕಾರಿಗಳ ಜತೆಗೆ ಹಮ್ಮಿಕೊಂಡಿದ್ದ ಅನೌಪಾಚಾರಿಕ ಸಭೆಯಲ್ಲಿ ಅವರು ಮಾತನಾಡಿದರು.

ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ, ಅದು ಜನಸಾಮಾನ್ಯರ ಕಲ್ಯಾಣಕ್ಕೆ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದನ್ನು ಜನರಿಗೆ ಮುಟ್ಟಿಸುವ ಪ್ರಾಮಾಣಿಕ ಕೆಲಸ ಆಗಬೇಕು. ಇದೊಂದು ಅನೌಪಚಾರಿಕ ಸಭೆ ಆಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಸಿ, ಇಲ್ಲಿನ ಸಮಸ್ಯೆಗಳ ಬಗ್ಗೆ ಆಳವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು, ಅಲ್ಲದೆ ಮಂಗಳೂರು ಮಹಾನಗರ ಪಾಲಿಕೆ ಸಭೆಯನ್ನು ಕೂಡ ಪ್ರತ್ಯೇಕವಾಗಿ ನಡೆಸುವುದಾಗಿ ತಿಳಿಸಿದ ಅವರು, ಇದಕ್ಕೆ ಸಂಬಂಧಿಸಿದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೀಗ ಮುಂಗಾರು ಪ್ರಾರಂಭಗೊಂಡಿದೆ, ಯಾವುದೇ ರೀತಿಯ ಪ್ರಾಕೃತಿಕ ವಿಕೋಪಗಳು ಆಗದಂತೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಬೇಕು. ಅದೇ ರೀತಿ ಕುಡಿವ ನೀರಿನ ಸಮಸ್ಯೆ ಎದುರಾಗಬಾರದು, ವಿಕೋಪಗಳಿಂದಾಗುವ ಭೂ ಕುಸಿತ, ಸಾರ್ವಜನಿಕ ಆಸ್ತಿಪಾಸ್ತಿಯ ಹಾನಿ, ವಿದ್ಯುತ್ ಪೂರೈಕೆ ಅಡಚಣೆ ಸೇರಿದಂತೆ ವಿದ್ಯುತ್ ಕಂಬಗಳು ಬೀಳುವುದು, ರಸ್ತೆ ತುಂಡಾಗುವುದು, ಮರ ಬಿದ್ದು ರಸ್ತೆ ಸಂಪರ್ಕ ಕಡಿತವಾಗುವುದು ಸೇರಿದಂತೆ ಈ ಎಲ್ಲಾ ಸಮಸ್ಯೆಗಳನ್ನು ಕೂಡಲೇ ನಿಭಾಯಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಸಂಚಾರ, ಸರಾಗ ನೀರು ಹರಿಯುವಿಕೆ ಅಧಿಕಾರಿಗಳು ಖಾತರಿ ಪಡಿಸಬೇಕು. ಜಿಲ್ಲೆಯಲ್ಲಿ ಕುಡಿವ ನೀರು ಇಲ್ಲದೆಡೆ ಟ್ಯಾಂಕರ್ ಮೂಲಕ ಪೂರೈಸುವ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದ ಅವರು ಮೆಸ್ಕಾಂನಿಂದ ಯಾವುದೇ ಹಾನಿ ಸಂಭವಿಸಿದಂತೆ ಅತ್ಯಂತ ಎಚ್ಚರ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗೆ ತಾಕೀತು ಮಾಡಿದರು.

  1.  

ದಕ್ಷಿಣ ಕನ್ನಡ ಸೂಕ್ಷ್ಮ ಜಿಲ್ಲೆ. ಧರ್ಮ- ಜಾತಿಯ ಹೆಸರಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಂತೆ ಮುನ್ನೆಚ್ಚರಿಕೆ ವಹಿಸಬೇಕು, ಅಂತಯೇ ನೈತಿಕ ಪೊಲೀಸ್ ಗಿರಿಯನ್ನು, ಬ್ಲಾಕ್ ಮೇಲ್ ಇತರೆ ಚಟುವಟಿಕೆಗಳನ್ನು ಹತ್ತಿಕ್ಕಲು ನಿಷ್ಪಕ್ಷಪಾತವಾಗಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್ ಮಾತನಾಡಿ, ನಗರದಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ರಚನೆ ಸಂಬಂಧಪಟ್ಟ ಬೆಂಗಳೂರಿನಲ್ಲಿ ಹೆಚ್ಚಿನ ಮಟ್ಟದಲ್ಲಿ ಚರ್ಚಿಸಲಾಯಿತು. ಅದಕ್ಕೆ ಸಂಬಂಧಿಸಿದಂತೆ ರೂಪುರೇಷೆಗಳನ್ನು ಸಿದ್ಧಪಡಿಸುವ ಕೆಲಸ ಆಗುತ್ತಿದೆ. ಘಟನೆ ಆಗುವ ಮುನ್ನವೇ ಎಚ್ಚರಿಕೆ ಕ್ರಮ ಕೈಗೊಳ್ಳುವುದು ಸೇರಿದಂತೆ, ಸಂಜೆ 5 ರ ನಂತರ ನಗರದ ಪ್ರಮುಖ ಸ್ಥಳಗಳು, ಪ್ರಮುಖ ರಸ್ತೆಗಳಲ್ಲಿ ಪೊಲೀಸರ ನಿಯೋಜನೆ ಮಾಡುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ,  ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್,  ಡಿಸಿಪಿ‌ ಅಂಶು ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಇದ್ದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com