
ಮಂಗಳೂರು: ಮಾದಕ ವಸ್ತು ಬಳಕೆ ತಡೆಗೆ ಪೊಲೀಸ್ ಇಲಾಖೆ ಜಿಲ್ಲಾಡಳತದ ಜತೆಗೆ ಮತ್ತು ಶೈಕ್ಷಣಿಕ ಸಂಸ್ಥೆಗಳ ಜತೆಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿ ಮಾದಕ ದ್ರವ್ಯ ಬಳಕೆ ತಡೆಗೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳು ವಂತೆ ಪೊಲೀಸ್ ಇಲಾಖೆಗೆ ಮತ್ತು ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ, ನಗರ ಪೊಲೀಸ್ ಕಮಿಷನರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅವರ ಜತೆಗೆ ಜಿಲ್ಲೆಯ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಡೆಸಿದ ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಜಿಲ್ಲೆಯ ಹಲವು ರಾಜಕೀಯ ಸಾಮಾಜಿಕ, ಶೈಕ್ಷಣಿಕ ಮತ್ತು ಇತರ ಕ್ಷೇತ್ರದ ನಾಯಕರುಗಳನ್ನು ಭೇಟಿ ಮಾಡಿ, ಸಭೆಗಳನ್ನು ಏರ್ಪಡಿಸಿದ ಸಂದರ್ಭಗಳಲ್ಲಿ ಕೆಲ ವಿಚಾರಗಳು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲೆಯಲ್ಲಿ ಮಾದಕ ವಸ್ತು ಅಕ್ರಮ ಬಳಕೆ, ಅನೈತಿಕ ಪೊಲೀಸಗಿರಿ ಮತ್ತು ಮತೀಯ ಗೂಂಡಾಗಿರಿಯು ಜಿಲ್ಲೆಯ ಶಾಂತಿ ಸುವ್ಯವಸ್ಥೆ ಮತ್ತು ಸಾಮರಸ್ಯ ಧಕ್ಕೆ ತರುವುದಕ್ಕೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. ಇದನ್ನು ಮಟ್ಟ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸರಕಾರದ ಈ ಕ್ರಮಕ್ಕೆ ಮಕ್ಕಳ ಪೋಷಕರ ಸಹಕಾರ ಅತ್ಯಗತ್ಯವಾಗಿ ಬೇಕು. ಈ ಜಾಲದ ಹಿಂದೆ ಪೊಲೀಸ್ ಇಲಾಖೆಯ ಕೆಳ ಹಂತದ ಸಿಬ್ಬಂದಿ ಕೈಜೋಡಿಸಿರುವುದು ನನ್ನ ಗಮನಕ್ಕೆ ಬಂದಿದ್ದು, ಸಂಬಂಧಿಸಿದ ಸಿಬ್ಬಂದಿ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಈ ನಿಟ್ಟನಲ್ಲಿ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರ ಜತೆಗೆ ಸೇರಿ ವಿಶೇಷ ಕಾರ್ಯಾಚರಣೆ ನಡೆಸಿ ಈ ಹಾವಳಿ ನಿಗ್ರಹಕ್ಕೆ ಸೂಚಿಸಲಾಗಿದೆ ಎಂದರು.
ಅನೈತಿಕ ಪೊಲೀಸಗಿರಿ ಹತ್ತಿಕ್ಕಲು ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಯಾವುದೇ ಶಕ್ತಿ ಕಾನೂನು ಕೈಗೆತ್ತಿಕೊಂಡಲ್ಲ, ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ಜಿಲ್ಲೆ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳವೇ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಇದಕ್ಕೊಂದು ಸವಾಲಾಗಿದ್ದು, ಜಿಲ್ಲೆಯ ಎಲ್ಲಾ ಪೊಲೀಸ್ ಸಿಬ್ಬಂದಿ ಪೊಲೀಸ್ ಮ್ಯಾನ್‌ವಲ್ ಮತ್ತು ಸಾಂವಿಧಾನಿಕವಾಗಿ ಕಾರ್ಯ ನಿರ್ವಹಣೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.


