
ಬೆಂಗಳೂರು: ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅವರ ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಹಿತ ಆರೋಪ ಮಾಡಿದ್ದು, ಈ ಕುರಿತು ಕುಮಾರಸ್ವಾಮಿ ಟ್ವಿಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಾಂಲಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ತಿಳಿಸಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣವೇ ಅದನ್ನು ತೆಗೆಸಿ ಮನೆ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ’ ಎಂದು ತಿಳಿಸಿದ್ದಾರೆ.
ಈ ಅಚಾತುರ್ಯಕ್ಕೆ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ, ದಂಡ ಕಟ್ಟುತ್ತೇನೆ. ಇದನ್ನೇ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಇವರ ಕ್ಷುಲ್ಲಕ ಮನಃಸ್ಥಿತಿ ಬಗ್ಗೆ ನನಗೆ ಮರುಕ ಇದೆ ಎಂದು ಟ್ವಿಟ್ ಮಾಡಿದ್ದಾರೆ.


