Breaking News

ತಾಪಮಾನ ಹೆಚ್ಚಳ, ಮುಂಜಾಗ್ರತಾ ಕ್ರಮ, ಸರಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಸೌಲಭ್ಯ: ಡಿಎಚ್ ಓ ಡಾ. ತಿಮ್ಮಯ್ಯ

 

ಮಂಗಳೂರು: ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ವೆನ್ಲಾಕ್ ಆಸ್ಪತ್ರೆಯಲ್ಲಿ 6 ಹಾಸಿಗೆ, ತಾಲೂಕು ಆಸ್ಪತ್ರೆಯಲ್ಲಿ ಎರಡು ಹಾಸಿಗೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಂದೊಂದು  ಹಾಸಿಗೆಗಳನ್ನು ಮೀಸಲಿಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್ .ಆರ್ . ತಿಮ್ಮಯ್ಯ ಅವರು ಸೋಮವಾರ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತ ಸಂಘವು ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದಶಕಗಳ ತಾಪಮಾನವನ್ನು ಗಮನಿಸಿದಾಗ  32 ಡಿಗ್ರಿ ಸೆಲ್ಸಿಯಸ್ 33 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿತ್ತು. ಈ ಬಾರಿ ತಾಪಮಾನ 36 ರಿಂದ 40 ಡಿಗ್ರಿ ಸೆಲ್ಸಿಯಸ್ ಗೆ  ಏರಿಕೆ ಕಂಡಿದೆ. ಈ ರೀತಿ ತಾಪಮಾನದಿಂದ  ಬಿಸಿಲಿನಲ್ಲಿ ಹೆಚ್ಚು ಓಡಾಡುತ್ತಿರುವವರಿಗೆ ತಲೆ ನೋವು, ಸುಸ್ತು, ನಿಶ್ಯಕ್ತಿ, ಚರ್ಮ ತುರಿಕೆ, ಜ್ವರ ಸೇರಿದಂತೆ ಹಲವು  ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಕೆಲವೊಮ್ಮೆ ಬಿಸಿಲಿನಾಘಾತ ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಕಷ್ಟು ಮುಂಜಾಗ್ರತೆ ಕ್ರಮ ಕೈಗೊಳ್ಳುವ ಅಗತ್ಯ ಇದೆ ಎಂದು ತಿಳಿಸಿದರು.

ಬಿಸಿಲಿನ ಜಳ ಹೆಚ್ಚಿರುವ  ಸಂದರ್ಭದಲ್ಲಿ ಹೊರಗೆ ಓಡಾಡದೇ ಇರುವುದು ಸೂಕ್ತ. ಶುದ್ಧ ನೀರಿನ  ಸೇವನೆ, ಮಜ್ಜಿಗೆ ಸೇವನೆ, ಬಿಳಿ ಅಥವಾ ತಿಳಿ ಬಣ್ಣದ  ಬಟ್ಟೆ ಧರಿಸುವುದು  ಬಿಸಿಲಿನ ನೇರ ಶಾಖವನ್ನು ತಡೆಯಲು  ಚಪ್ಪಲಿ ಧರಿಸುವುದು ಕೊಡೆ ಬಳಸುವುದು, ದೇಹದಲ್ಲಿ ನೀರಿನ ಅಂಶ ಕಡಿಮೆ ಆಗದಂತೆ ನಿರ್ಜಲೀಕರಣವಾಗದಂತೆ ಎಚ್ಚರ ವಹಿಸಬೇಕು ಎಂದರು.

 

  1.  

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1.4  ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗಿದೆ. ಮರಗಳ ನಾಶ ,ವಾಹನಗಳ ದಟ್ಟಣೆ, ಇಂಗಾಲದ ಡೈ ಆಕ್ಸೈಡ್  ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತಾಪಮಾನದ ಏರಿಕೆಯಾಗುತ್ತಿದೆ ಎಂದು ಜಿಲ್ಲಾ ರೋಗ ವಾಹಕ ಮತ್ತು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ತಿಳಿಸಿದರು.

ತಾಪಮಾನ ಹೆಚ್ಚುತ್ತಿರುವ ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚುತ್ತಿರುವ ಕಾರಣ ಡೆಂಗಿ ಜ್ವರದ ಪ್ರಕರಣಗಳು ಹೆಚ್ಚುತ್ತಿವೆ. ಇದೂವರೆಗೆ 108 ಡೆಂಗಿ ಪ್ರಕರಣಗಳು ಕಂಡು ಬಂದಿವೆ. ಹೊರ ಜಿಲ್ಲೆಯ ಪ್ರಯಾಣಿಕರ ಜಿಲ್ಲೆಗೆ ಭೇಟಿ ನೀಡುತ್ತಿರುವ ಕಾರಣ ಡೆಂಗಿ ಪೀಡಿತರ ಸಂಪರ್ಕದಿಂದಲೂ ಅಲ್ಪ ಪ್ರಮಾಣದಲ್ಲಿ ಡೆಂಗಿ ಪ್ರಕರಣ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ತಿಳಿಸಿದರು.

ನಾವು ಸೇವಿಸುವ ಮಸಾಲೆಯುಕ್ತ ಆಹಾರ ಪದಾರ್ಥಗಳು ಬೇಸಗೆಯಲ್ಲಿ ಸೂಕ್ತವಲ್ಲ. ಬಿಸಿಲಿನ ತಾಪಮಾನದ ಸಂದರ್ಭದಲ್ಲಿ ಸಾರ್ವಜನಿಕರು ಕೈ ಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ  ಮಾಹಿತಿ ಪತ್ರವನ್ನು ಬಿಡುಗಡೆ ಗೊಳಿಸಲಾಯಿತು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೋಶಾಧಿಕಾರಿ ಪುಷ್ಪ ರಾಜ್  ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com