ದಾಂಡೇಲಿ: ಹುಬ್ಬಳ್ಳಿ ಕಡೆಯಿಂದ ಪ್ರವಾಸಕ್ಕೆ ದಾಂಡೇಲಿ ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಟೆದ ಪರಿಣಾಮ ಎಂಟು ಮಂದಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರ ಆಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲ್ಲೂಕಿನ ತಾಟಗೇರಾ ಕ್ರಾಸ್ ಬಳಿ ನಡೆದಿದೆ.
ಇನೋವಾ ಕಾರು ತಾಟಗೇರಾ ಕ್ರಾಸ್ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಇದ್ದವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಹುಬ್ಬಳ್ಳಿ ನಿವಾಸಿ ಅನೂಪ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ಸಾಗಿಸಲಾಗಿದೆ. ಹುಬ್ಬಳ್ಳಿ ಮೂಲದ ಮಹಮ್ಮದ್ ಪುರ್ಕಾನ್, ಮಲಿಕ್ ಇರ್ಫಾನ್ ನದಾಫ್ ಮತ್ತು ಅಲಿಸಾಬ್ ಇರ್ಫಾನ್ ನದಾಫ್ ಅವರಿಗೂ ಗಂಭೀರ ಸ್ವರೂಪದ ಗಾಯಳಾಗಿವೆ. ಇವರನ್ನು ಕೂಡ ಧಾರವಾಡ ಆಸ್ಪತ್ರೆಗೆ ಸಾಗಿಸಲಾಗಿದೆ.
ಮರಕ್ಕೆ ಇನ್ನೋವಾ ಕಾರು ಡಿಕ್ಕಿ ಹೊಡೆದ ರಭಸಕ್ಕೆ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆ ಪಿಎಸ್ಐ ಜಗದೀಶ್, ಎಎಸ್ಐ ವೆಂಕಟೇಶ ತೆಗ್ಗಿನ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.