ಮಂಗಳೂರು: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯ್ದೆ ಅಡಿ ದಾಖಲಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಹಾರವನ್ನು ತ್ವರಿತವಾಗಿ ಮಂಜೂರು ಮಾಡಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮದ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೌರ್ಜನ್ಯ ತಡೆ ಕಾಯ್ದೆಯಡಿ ಜಿಲ್ಲೆಯಲ್ಲಿ ದಾಖಲಾದ ಎಲ್ಲಾ ಪ್ರಕರಣಗಳಿಗೆ ಪರಿಹಾರ ಧನ ಮಂಜೂರು ಮಾಡಲಾಗಿದೆ. ನ್ಯಾಯಾಲಯದ ಮುಂದೆ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಅಭಿಯೋಜನೆಗೊಳಿಸಿ, ತಪ್ಪಿತಸ್ಥರಿಗೆ ನ್ಯಾಯಾಲಯದಲ್ಲಿ ಶಿಕ್ಷೆ ವಿಧಿಸುವ ಅವಶ್ಯಕತೆ ಇರುವ ಎಲ್ಲಾ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
2025 ರ ಜನವರಿ 1 ರಿಂದ ಸೆ.15 ರವರೆಗೆ ಜಿಲ್ಲೆಯಲ್ಲಿ 42 ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಇದೂವರೆಗೆ 34.10 ಲಕ್ಷ ರೂ. ಪರಿಹಾರ ನೀಡಲಾಗಿದೆ. 22 ಪ್ರಕರಣಗಳಲ್ಲಿ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಹೇಮಲತಾ ಅವರು ಸಭೆಗೆ ತಿಳಿಸಿದರು.
ಅಲೆಮಾರಿ ಸಮುದಾಯದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು, ಸಾಲ ಸೌಲಭ್ಯ ಯೋಜನೆಗಳನ್ನು ಆದ್ಯತೆಯಲ್ಲಿ ಮಂಜೂರು ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಎಲ್ಲಾ ಇಲಾಖೆಗಳು ಎಸ್‍ಸಿಪಿ ಹಾಗೂ ಟಿಎಸ್‍ಪಿ ಕಾರ್ಯಕ್ರಮಗಳನ್ನು ನಿಗದಿತ ಕಾಲ ಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಇದರ ವಿಳಂಬವನ್ನು ಒಪ್ಪಲಾಗದು. ಫಲಾನುಭವಿ ಆಧಾರಿತ ಯೋಜನೆಗಳ ಪ್ರಯೋಜನವನ್ನು ಅರ್ಹರಿಗೆ ತಲುಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಸಿಇಒ ನರ್ವಾಡೆ ವಿನಾಯಕ್ ಕಾರ್ಬಾರಿ, ಎಸ್ಪಿ ಡಾ. ಅರುಣ್ ಕೆ, ಡಿಸಿಪಿ ಮಿಥುನ್, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಇದ್ದರು.