
ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ)ಗಳ ಬದಲಾಗಿ ಮತಪತ್ರ (ಬ್ಯಾಲೆಟ್ ಪೇಪರ್)ಗಳ ಮೂಲಕ ನಡೆಸಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಈ ವಿಷಯ ತಿಳಿಸಿದರು.
ಪಂಚಾಯಿತಿ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸುವ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ)ವಿಧೇಯಕ-2026ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈಗಾಗಲೇ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ ನಗರ ಪಾಲಿಕೆ ಚುನಾವಣೆಗಳನ್ನು ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಿ ನಡೆಸುವ ಕುರಿತು ಸರಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು.


