ಹಾವೇರಿ: ಕಂದಾಯ ಇಲಾಖೆಯಿಂದ 2ನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಕ್ಕೆ ಹಕ್ಕುಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ. ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿದ್ದು, ನಮ್ಮದ್ದು ಜನಪರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸರಕಾರದ ಸಹಸ್ರ ದಿನಾಚರಣೆ ಮತ್ತು ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಸರ್ಕಾರದಲ್ಲಿ ಕ್ರಾಂತಿಕಾರಿ ಪ್ರಗತಿ ಆಗಿದೆ ಎಂದು ಸಚಿವರ ಸಾಧನೆಗೆ ಸಿಎಂ ವೇದಿಕೆಯಲ್ಲೇ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ. ಜಿಎಸ್ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದು ದಾಖಲೆಗಳನ್ನು ಮಂಡಿಸಿದರು.
ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೃಷ್ಣ ಭೈರೇಗೌಡ, ಶಿವಾನಂದ ಪಾಟೀಲ್, ಹೆಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ ರೇವಣ್ಣ, ವಿಧಾನ ಪರಿಷತ್ತಿನಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹಾಗೂ 20 ಕ್ಕೂ ಹೆಚ್ಚು ಮಂದಿ ಶಾಸಕರುಗಳು ಮತ್ತು ಮುಖಂಡರುಗಳು, ನಾಯಕರು ಇದ್ದರು.



