ಮಂಗಳೂರು: ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಆರ್ ಎಸ್ ಎಸ್ ಹಾಗೂ ಬಿಜೆಪಿ ಬಗ್ಗೆ ಹಗುರವಾಗಿ ಮಾತನಾಡುವ ಜತೆಗೆ ಕೋಮು ಭಾವನೆಯಿಂದ ಅಭಿವೃದ್ಧಿ ಆಗುತ್ತಿಲ್ಲ ಎಂದು ಬಿಟ್ಟಿ ಪ್ರಚಾರದ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಲಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ್ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎರಡೂವರೆ ವರ್ಷಗಳಿಂದ ಐಟಿ, ಬಿಟಿ ಸಚಿವರಾಗಿ ಕೆಲಸ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಮೊದಲು ಹೇಳಲಿ. ಅವರದ್ದೇ ಕ್ಷೇತ್ರ ಆಗಿರುವ ಕಲಬುರಗಿಗೆ ಅವರ ಕೊಡುಗೆ ಏನು ಎಂಬುದನ್ನು ಬಹಿರಂಗಪಡಿಸಲಿ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂಲ ಸೌಲಭ್ಯಗಳಿಗೆ ಯಾವುದೇ ಕೊರತೆ ಆಗಿಲ್ಲ. ಹಾಗಂತ ಕಲಬುರಗಿಗಿಂತ ನಮ್ಮ ದಕ್ಷಿಣ ಕನ್ನಡ ಜಿಲ್ಲೆ ಹಿಂದೇ ಬಿದ್ದಿಲ್ಲ ಎಂದರು.

ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿ ಜಿಲ್ಲೆಗೆ ಯಾವ ಪ್ರಯೋಜನವೂ ಆಗಿಲ್ಲ. ಬಂಡವಾಳ ಹೂಡಿಕೆ ಕೆಲಸವೂ ಆಗಿಲ್ಲ.ಯಾವುದೇ ಐಟಿ ಬಿಟಿ ಸಂಸ್ಥೆಗಳೂ ಜಿಲ್ಲೆಗೆ ಬಂದಿಲ್ಲ. ಉದ್ಯೋಗ ಸೃಷ್ಟಿಯೂ ಆಗಿಲ್ಲ. ಜಿಲ್ಲೆಯಲ್ಲಿ ಗಲಭೆ, ಅಶಾಂತಿ ನಿರ್ಮಾಣ ಆಗಿರುವುದು ಕಾಂಗ್ರೆಸ್ ಅವಧಿಯಲ್ಲಿ ಎಂದರು.
ಶಾಸಕ ಡಾ. ಭರತ್ ಶೆಟ್ಟಿ ಅವರು ಮಾತನಾಡಿ, ಪ್ರಿಯಾಂಕ ಖರ್ಗೆ ಅವರು ರಾಹುಲ್ ಗಾಂಧಿ ಅವರಿಗೆ ಬಕೆಟ್ ಹಿಡಿವ ಮೂಲಕ ಸೂಕ್ತ ಸ್ಥಾನಮಾನದ ನಿರೀಕ್ಷೆಯಲ್ಲಿದ್ದಾರೆ. ಅವರನ್ನು ಮೆಚ್ಚಿಸಲು ಕೀಳು ಮಟ್ಟದ ಹೇಳಿಕೆ ನೀಡಲಾರಂಭಿಸಿದ್ದಾರೆ. ಆರ್ ಎಸ್ ಎಸ್ , ಬಿಜೆಪಿ ಕುರಿತಾದ ತಮ್ಮ ಬೇಜವಾಬ್ದಾರಿ ಹೇಳಿಕೆ ಬಗ್ಗೆ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ದಿನೇಶ್ ಅಮ್ಟೂರು, ಸಂಜಯ ಪ್ರಭು, ವಸಂತ ಪೂಜಾರಿ ಇದ್ದರು.



