ಸಿರಸಿಯ ಆಸ್ಪತ್ರೆಗೆ ಜಿಲ್ಲಾ ಆಸ್ಪತ್ರೆಯ ಎಲ್ಲ ಸೌಲಭ್ಯ ಒದಗಿಸುವ ಭರವಸೆ ನೀಡುವೆ: ಸಚಿವ ದಿನೇಶ್ ಗುಂಡೂರಾವ್

ಕಾರವಾರ (ಸಿದ್ದಾಪುರ): ಉತ್ತರ ಕನ್ನಡ ಜಿಲ್ಲೆಯಲ್ಲಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಬೇಕಾದ ಎಲ್ಲ ಸೌಲಭ್ಯಗಳನ್ನು ಶೀಘ್ರದಲ್ಲಿಯೇ ಪೂರೈಕೆ ಮಾಡಲಾಗುತ್ತದೆ ಎಂದು ಸಚಿವ ದಿನೇಶ ಗುಂಡೂರಾವ್ ಹೇಳಿದರು.

ಕ್ಯಾದಗಿಯಲ್ಲಿ ರೂಪಾಯಿ 9 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿ, ಉತ್ತಮ ವೈದ್ಯರು ಮತ್ತು ಸಿಬ್ಬಂದಿ ವರ್ಗ ಇದ್ದಾಗ ಮಾತ್ರ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಸಾಧ್ಯ. ಕಾಯಿಲೆಗಳ ಹೆಚ್ಚಳಕ್ಕೆ ನಮ್ಮ ಜೀವನ ಶೈಲಿಯೂ ಮುಖ್ಯ ಕಾರಣವಾಗಿದ್ದು, ಹೆಚ್ಚಿನ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದ ಅವರು ಸಿರಸಿಯ ಆಸ್ಪತ್ರೆಗೆ ಜಿಲ್ಲಾ ಆಸ್ಪತ್ರೆಯಲ್ಲಿರುವ ಎಲ್ಲ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ರೋಗ ಉಲ್ಭಣಗೊಂಡ ನಂತರ ಚಿಕಿತ್ಸೆ ಪಡೆಯುವ ಬದಲು ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಹಚ್ಚಿ ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಗೃಹ ಆರೋಗ್ಯ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ, ಕ್ಯಾದಗಿಯಲ್ಲಿ ಹಲವಾರು ವರ್ಷಗಳ ಬೇಡಿಕೆಯಾದ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆಗೊಂಡಿರುವುದು ಎಲ್ಲರಿಗೂ ಸಂತಸ ತಂದಿದೆ. ಈ ಭಾಗದಲ್ಲಿರುವ ಮಂಗನ ಕಾಯಿಲೆ ತಪಾಸಣೆಗೋಸ್ಕರ ರೂಪಾಯಿ 40 ಲಕ್ಷ ವೆಚ್ಚದಲ್ಲಿ ಸಿರಸಿಯಲ್ಲಿ ತಪಾಸಣಾ ಕೇಂದ್ರ ತೆರೆಯಲು ಆರೋಗ್ಯ ಸಚಿವರು ಸಹಕರಿಸಿದ್ದಾರೆ ಎಂದರು.

ಆರೋಗ್ಯ ಇಲಾಖೆಯ ಬೆಳಗಾವಿ ವಿಭಾಗದ ಸಹ ನಿರ್ದೇಶಕಿ ಡಾ. ಪುಷ್ಪಾ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಜಿ.ನಾಗರಾಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಂಕರ ರಾವ್, ಆರ್ ಸಿಎಚ್ ಡಾ. ನಟರಾಜ್, ತಹಶೀಲ್ದಾರ ಎಂ. ಆರ್. ಕುಲಕರ್ಣಿ, ತಾ. ಪಂ ಇಓ ದೇವರಾಜ ಹಿತ್ತಲಕೊಪ್ಪ, ಕ್ಯಾದಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕುಸುಮಾ ಇದ್ದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮೀಕಾಂತ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು.

Leave a Reply

Your email address will not be published. Required fields are marked *