ಉ.ಕ ಜಿಲ್ಲೆಯ 73 ಪರೀಕ್ಷಾ ಕೇಂದ್ರಗಳಲ್ಲಿಎಸ್ ಎಸ್ ಎಲ್ ಸಿ ಪರೀಕ್ಷೆ, ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಎಲ್ಲ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ಕುರಿತಂತೆ, ವಿದ್ಯಾರ್ಥಿಗಳಿಗೆ ಅಗತ್ಯ ಇರುವ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಯಾವುದೇ ವಿದ್ಯಾರ್ಥಿ ಗೈರು ಹಾಜರಾಗದಂತೆ ಎಚ್ಚರ ವಹಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ, ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಇದೇ 18 ರಿಂದ ಏಪ್ರಿಲ್ 2 ರವರೆಗೆ ಜಿಲ್ಲೆಯ 73 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 19,988 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳಿಗೆ ಈ ಬಾರಿ ಶಿಕ್ಷಣ ಇಲಾಖೆವತಿಯಿಂದ ಉತ್ತಮ ರೀತಿಯಲ್ಲಿ ತರಬೇತಿ ನೀಡಿದ್ದು, ಪರೀಕ್ಷೆಗೆ ಹಾಜರಾದ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತೀರ್ಣರಾಗುವ ರೀತಿಯಲ್ಲಿ ಅವರನ್ನು ಸಿದ್ದಗೊಳಿಸಲಾಗಿದ್ದು, ಪರೀಕ್ಷಾ ಹಾಜರಾತಿಯು ಶೇ100 ಆದಲ್ಲಿ ಫಲಿತಾಂಶವು ಶೇ100 ಬರಬಹುದಾದ ಎಲ್ಲಾ ಸಾಧ್ಯತೆಗಳಿರುವ ಕಾರಣ, ಯಾವುದೇ ವಿದ್ಯಾರ್ಥಿ ಗೈರು ಹಾಜರಾಗದಂತೆ ವಿದ್ಯಾರ್ಥಿಗಳಿಗೆ ಅಗತ್ಯ ಇರುವ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಹೇಳಿದರು.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾದ ಮಾರ್ಗದಲ್ಲಿ ಮತ್ತು ನಿಗದಿತ ಸಮಯಕ್ಕೆ ಬಸ್ ವ್ಯವಸ್ಥೆ ಒದಗಿಸುವಂತೆ ತಿಳಿಸಿದ ಅವರು ವಿದ್ಯಾರ್ಥಿಗಳು ಸಾಕಷ್ಟು ಮುಂಚಿತವಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪುವ ನಿಟ್ಟಿನಲ್ಲಿಬಸ್‌ಗಳಿಗೆ ಸಮಯ ನಿಗದಿಪಡಿಸಿ. ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮತ್ತು ಪರೀಕ್ಷಾ ಮಂಡಳಿಯು ಸೂಚಿಸಿರುವಂತೆ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಯಾವುದೇ ಲೋಪ ಆಗದಂತೆ ಪರೀಕ್ಷೆಗಳನ್ನು ನಡೆಸಬೇಕು ಎಂದರು.

ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಪೊಲೀಸ್ ಭದ್ರತೆಯಲ್ಲಿ, ಜಿ. ಪಿ. ಎಸ್. ಅಳವಡಿಸಿದ ವಾಹನಗಳ ಮೂಲಕ ಪರೀಕ್ಷೆ ಕೇಂದ್ರಗಳಿಗೆ ತಲುಪಿಸಲು ಹಾಗೂ ಎಲ್ಲಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೀಕ್ಷಾ ಪ್ರಕ್ರಿಯೆಗಳು ಆನ್‌ಲೈನ್ ನಲ್ಲಿ ನಡೆಯುವುದರಿಂದ ಎಲ್ಲಾ ಕೇಂದ್ರಗಳಲ್ಲಿ ಇಂಟರ್ನೆಟ್ ನ ಯಾವುದೇ ಅಡಚಣೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.

ಪರೀಕ್ಷಾ ಮಂಡಳಿಯ ಮಾರ್ಗಸೂಚಿಯಂತೆ ಪರೀಕ್ಷೆಗಳನ್ನು ಸಿಸಿಟಿವಿ ಕಣ್ಗಾವಲುನಲ್ಲಿ ನಡೆಸಬೇಕು ಹಾಗೂ ವೆಬ್ ಕಾಸ್ಟಿಂಗ್ ನಿರ್ವಹಣೆಗೆ ಮಾಡಬೇಕು. ಪರೀಕ್ಷೆ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್,ಇಯರ್ಫೋನ್,ಮೈಕ್ರೋಫೋನಗಳು,ಬ್ಲೂಟೂತ್ ಸಾಧನ, ಅನುಮತಿಸಲಾಗುವುದಿಲ್ಲ. ,ಸಿಬ್ಬಂದಿಗಳು ಮೊಬೈಲ್ ಬಳಕೆಗೂ ಅವಕಾಶವಿಲ್ಲ, ಫೋಟೋಗ್ರಾಫಿಯನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದರು.

ಪರೀಕ್ಷೆ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಗಳನ್ನು ಒದಗಿಸಬೇಕು, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತಗೊಳಿಸದಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ ಅವರು ಜಿಲ್ಲೆಯಲ್ಲಿ ತಾಪಮಾನ ಹೆಚ್ಚಿರುವ ಕಾರಣ ಎಲ್ಲಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಓ.ಆರ್.ಎಸ್ ಪಾಕೆಟ್ ಗಳೊಂದಿಗೆ ಸಿಬ್ಬಂದಿ ನಿಯೋಜಸಬೇಕು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಸಿರುವ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ಹಾಗೂ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಸಿಇಒ ಡಾ. ದಿಲೀಶ್ ಶಶಿ, ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲತಾ ನಾಯ್ಕ ಹಾಗೂ ವರ್ಚುವಲ್ ಮೂಲಕ ಎಲ್ಲಾ ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಸಿರುವ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *