ಗ್ಯಾಸ್, ಪೆಟ್ರೋಲ್, ಡಿಸೇಲ್ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಸ್ನೇಹಲ್

ಸ್ನೇಹಲ್

ಧಾರವಾಡ: ಎಲ್ ಪಿಜಿ ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಮತ್ತು ಡೀಸೆಲ್ ಕುರಿತು ಜನರಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗೆ ಯಾರೂ ಆತಂಕ ಪಡುವ ಅಗತ್ಯ ಇಲ್ಲ. ಧಾರವಾಡ ಜಿಲ್ಲೆಯಲ್ಲಿ ಇಂಧನ ಕೊರತೆಯಿಲ್ಲ, ವದಂತಿಗೆ ಕಿವಗೊಡಬೇಡಿ, ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್.ಆರ್ ಅವರು ತಿಳಿಸಿದ್ದಾರೆ.

ಧಾರವಾಎ ಜಿಲ್ಲೆಯ ಎಲ್ಲ ಪೆಟ್ರೋಲ್ ಬಂಕ್‌ಗಳಲ್ಲಿ ಈಗಾಗಲೇ ಸಾಕಷ್ಟು ಇಂಧನ ಸಂಗ್ರಹ ಇದ್ದು, ನಾಲ್ಕರಿಂದ ಐದು ದಿನಗಳಿಗೆ ಬೇಕಾಗುವಷ್ಟು ಸಂಗ್ರಹ ಇದೆ ಎಂದು ಅವರು ಹೇಳಿದ್ದಾರೆ.

ಸಾಮಾನ್ಯವಾಗಿ ಜಿಲ್ಲೆಯಲ್ಲಿ ಪ್ರತಿದಿನ 60 ರಿಂದ 65 ಕಿಲೋ ಲೀಟರ್ (ಕೆ.ಎಲ್) ಇಂಧನ ಸರಬರಾಜಾಗುತ್ತಿದ್ದು, ಸುಳ್ಳು ಸುದ್ದಿ ಹರಡಿದ ಪರಿಣಾಮ 100 ರಿಂದ 110 ಕೆ.ಎಲ್ ವರೆಗೆ ಸರಬರಾಜು ಮಾಡಲಾಗುತ್ತಿದೆ. ಆತಂಕದಿಂದ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಗಾಗಿ ಬಂಕ್‌ಗಳಲ್ಲಿ ಅನವಶ್ಯಕವಾಗಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.

ಒಂದು ವೇಳೆ ದಾಸ್ತಾನು ಕಡಿಮೆ ಆದರೂ, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್), ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್(ಬಿಪಿಸಿಎಲ್) ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಸಂಸ್ಥೆಗಳು ಅಗತ್ಯ ಸರಬರಾಜು ಮಾಡಲಿವೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರಸ್ತುತ 10,026 ಗೃಹ ಬಳಕೆ ಎಲ್ಪಿಜಿ ಸಿಲಿಂಡರ್‌ಗಳು ಹಾಗೂ 800 ವಾಣಿಜ್ಯ ಸಿಲಿಂಡರ್‌ಗಳು ದಾಸ್ತಾನುಗಳಲ್ಲಿ ಲಭ್ಯವಿವೆ. ಸುಳ್ಳು ಮಾಹಿತಿ ಹರಡಿ ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma