ಸುರತ್ಕಲ್: ಮೀನುಗಾರರ ಮುಖಂಡ, ಸಾಹಿತಿ ಹಾಗೂ ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಬೈಕಂಪಾಡಿ (75) ಅವರು ನಿಧನರಾಗಿದ್ದಾರೆ.
ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಮೊಗವೀರ ಸಮುದಾಯದ ಮುಖಂಡರಾಗಿ ಗುರುತಿಸಿಕೊಂಡಿದ್ದ ರಾಮಚಂದ್ರ ಬೈಕಂಪಾಡಿ ಅವರು, ಮೀನುಗಾರರ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸುತ್ತಾ ಬಂದಿದ್ದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು.
ರಾಮಚಂದ್ರ ಬೈಕಂಪಾಡಿ ಅವರು ಸಾಹಿತ್ಯ, ರಂಗಭೂಮಿ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. 2021ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸಾಹಿತಿಯಾಗಿ ಮತ್ತು ರಂಗಕರ್ಮಿಯಾಗಿ ಅವರು ಸಾಂಸ್ಕೃತಿಕ ಲೋಕಕ್ಕೆ ಕೊಡುಗೆ ನೀಡಿದ್ದರು.
ಸುದೀರ್ಘ ಕಾಲ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಅವರು, ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜವಾಬ್ದಾರಿ ನಿರ್ವಹಿಸಿದ್ದರು.





