ನಾರಿ ಶಕ್ತಿ ವಂದನ್‌ ಮಸೂದೆ ಜಾರಿಗೆ ಬಿಜೆಪಿ ಮಹಿಳಾ ಮೋರ್ಚಾದಿಂದ ಸಂಸದ ಚೌಟ ಕಚೇರಿಯಲ್ಲಿ ಸಹಿ ಸಂಗ್ರಹ 

Spread the love

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಐತಿಹಾಸಿಕ ‘ನಾರಿ ಶಕ್ತಿ ವಂದನ್ ಅಧಿನಿಯಮ’ವನ್ನು ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಇರುವ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಕಚೇರಿಯಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯಿತು.

ವಿವಿಧ ಕೆಲಸಗಳ ಅಂಗವಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಭೇಟಿ ಮಾಡಲು ಬಂದಿದ್ದ ಮಹಿಳೆಯರು, ಕೇಂದ್ರ ಸರ್ಕಾರದ ಐತಿಹಾಸಿಕ ‘ನಾರಿ ಶಕ್ತಿ ವಂದನ್ ಅಧಿನಿಯಮ’ ಜಾರಿ ಆಗುತ್ತಿರುವ ಸಂದರ್ಭದಲ್ಲಿ ಮಹಿಳೆಯರು ಸ್ವಯಂಪ್ರೇರಿತರಾಗಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ, ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಕಳೆದ ದಶಕದಲ್ಲಿ ಭಾರತವು ಕೇವಲ ಮಹಿಳಾ ಕಲ್ಯಾಣದ ಹಂತದಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ದೃಢವಾದ ದಾಪುಗಾಲು ಹಾಕಿದ್ದು, ‘ನಾರಿ ಶಕ್ತಿ’ಯ ನವೋದಯಕ್ಕೆ ಸಾಕ್ಷಿಯಾಗಿದೆ ಎಂದು ಪಾಲ್ಗೊಂಡ ಮಹಿಳೆಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಸತ್ ವಿಶೇಷ ಕಲಾಪದಲ್ಲಿ ಈ ಅಧಿನಿಯಮ ಚರ್ಚೆ ಆಗುತ್ತಿರುವುದು ದೇಶದ ಇತಿಹಾಸದಲ್ಲಿ ಸುವರ್ಣ ಅಧ್ಯಾಯ ಆಗಲಿದೆ. ಮಹಿಳಾ ಸಬಲೀಕರಣದಿಂದ ಮಹಿಳೆಯರ ನೇತೃತ್ವದ ಅಭಿವೃದ್ಧಿ ಎಂಬ ಆಶಯದೊಂದಿಗೆ ಕೇಂದ್ರ ಸರ್ಕಾರವು ಕೈಗೊಂಡಿರುವ ಈ ಕ್ರಾಂತಿಕಾರಿ ಹೆಜ್ಜೆಗೆ ನಮ್ಮೆಲ್ಲರ ಬೆಂಬಲವಿದೆ ಎಂದು ಇದೇ ವೇಳೆ ಮಹಿಳೆಯರು ತಿಳಿಸಿದರು.

ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ನಾರಿ ಶಕ್ತಿ ವಂದನ್ ಅಧಿನಿಯಮ ಎಂದು ಕರೆಯಲಾಗುವ ಮೀಸಲಾತಿ ಕಾನೂನಿನ ತಿದ್ದುಪಡಿಗಳನ್ನು ತರಲು ಮುಂದಾಗಿರುವುದು ಐತಿಹಾಸಿಕ ನಿರ್ಧಾರ. ಕಳೆದ ಒಂದು ದಶಕದಲ್ಲಿ ಭಾರತವು ಕೇವಲ ಮಹಿಳಾ ಕಲ್ಯಾಣದ ಹಂತದಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ದೃಢವಾದ ದಾಪುಗಾಲು ಹಾಕಿದೆ. ಇಂದು ಭಾರತೀಯ ಮಹಿಳೆಯರು ಕೇವಲ ಮನೆಗೆ ಸೀಮಿತವಾಗದೆ, ನಿರ್ಧಾರ ಕೈಗೊಳ್ಳುವ ಉನ್ನತ ಸ್ಥಾನಗಳಲ್ಲಿ ಕುಳಿತು ದೇಶದ ಬದಲಾವಣೆಗೆ ಮುನ್ನುಡಿ ಬರೆಯುತ್ತಿದ್ದಾರೆ. ಸಂಸತ್ತಿನಿಂದ ಹಿಡಿದು ಬಾಹ್ಯಾಕಾಶದವರೆಗೆ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚುತ್ತಿರುವುದು ‘ನಾರಿ ಶಕ್ತಿ’ಯ ನವೋದಯಕ್ಕೆ ಸಾಕ್ಷಿ ಆಗಿದೆ ಎಂದು ಹೇಳಿದರು.

ಸಂಸತ್ ವಿಶೇಷ ಕಲಾಪದಲ್ಲಿ ಈ ಅಧಿನಿಯಮದ ಚರ್ಚೆಗೆ ಅವಕಾಶ ಕಲ್ಪಿಸಿರುವುದು ಮಹಿಳಾ ಸಬಲೀಕರಣದ ಇತಿಹಾಸದಲ್ಲಿ ಸುವರ್ಣ ಅಧ್ಯಾಯ ಆಗಲಿದೆ. ಮಹಿಳಾ ಸಬಲೀಕರಣದಿಂದ ಮಹಿಳೆಯರ ನೇತೃತ್ವದ ಅಭಿವೃದ್ಧಿ ಎಂಬ ಆಶಯದೊಂದಿಗೆ ಕೇಂದ್ರ ಸರ್ಕಾರವು ಕೈಗೊಂಡಿರುವ ಈ ಕ್ರಾಂತಿಕಾರಿ ಹೆಜ್ಜೆಗೆ ಪೂರ್ಣ ರೀತಿಯ ಬೆಂಬಲ ಇದ್ದು, ಈ ಮಸೂದೆ ಕಾನೂನು ಆಗಿ ಜಾರಿಗೆ ಬರುವ ದಿನಗಳು ಕೂಡ ಹತ್ತಿರ ಆಗಿರುವುದು ಬಹಳ ಸಂತೋಷದ ವಿಚಾರ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಹಿಳಾ ಮೋರ್ಚಾದ ಅಧ್ಯಕ್ಷ ಮಂಜುಳಾ ರಾವ್, ಜಿಲ್ಲಾ ವಕ್ತಾರ ಮಾಧವ್ ಮಾವೆ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಕಾರ್ಯಕಾರಣಿ ಸದಸ್ಯೆ ಸುಲೋಚನಾ ಭಟ್, ಸಮಾಜ ಸೇವಕರಾದ ಹಿಲ್ಡಾ ರಾಯಪ್ಪನ್, ನಿಕಟ ಪೂರ್ವ ಪಾಲಿಕೆ ಸದಸ್ಯರು, ಮುಖಂಡರು ಪಂಚಾಯತ್ ಸದಸ್ಯರು ಸೇರಿದಂತೆ ಹಲವರು ಇದ್ದರು.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma