ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಇಲಾಖೆಯಿಂದ ದೊರೆವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲ ಪೌರ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕಾರ್ಮಿಕ ಇಲಾಖೆಯಿಂದ ನಿಗದಿ ಪಡಿಸಿರುವ ವೇತನವನ್ನು ನೀಡಬೇಕು, ಇ.ಎಸ್.ಐ ಮತ್ತು ಪಿ.ಎಫ್ ನಿಗದಿತವಾಗಿ ಕಡಿತ ಮಾಡಿರುವ ಬಗ್ಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪರಿಶೀಲಿಸಬೇಕು, ಕೆಲಸದ ಅವಧಿಯಲ್ಲಿ ಸೂಕ್ತ ಸುರಕ್ಷತಾ ಉಪಕರಣಗಳನ್ನು ನೀಡುವುದರ ಜೊತೆಗೆ ಅವುಗಳನ್ನು ಬಳಸುವ ಬಗ್ಗೆ ತಿಳಿಸಬೇಕು. ಕೆಲಸದ ನಂತರ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಯ ಸೌಲಭ್ಯ ಒದಗಿಸಬೇಕು. ನಿಯಮಿತವಾಗಿ ಅವರ ಆರೋಗ್ಯ ತಪಾಸಣೆ ಮತ್ತು ಮಾಸ್ಟರ್ ಹೆಲ್ತ್ ಚೆಕ್ ಅಪ್‌ಗಳನ್ನು ಮಾಡಿಸಬೇಕು ಎಂದರು.
ಜಿಲ್ಲೆಯ ಮ್ಯಾನ್ಯುಯಲ್ ಸ್ಕ್ವಾವೆಂಜರ್ ಪದ್ದತಿ ಕಂಡು ಬಾರದಂತೆ ಎಚ್ಚರ ವಹಿಸಬೇಕು. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಯಂತ್ರಗಳ ಮೂಲಕವೇ ಶೌಚಗುಂಡಿಗಳ ಸ್ವಚ್ಚತೆ ಮಾಡಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಮೇಶ್, ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಜಾಗೃತಿ ಸಮಿತಿ ಸದಸ್ಯರು ಇದ್ದರು.