ಮಂಗಳೂರು: ಮಾದಕ ವಸ್ತು ವ್ಯಸನಿಗಳಿಗೆ ಎಚ್.ಐ.ವಿ ರೋಗದ ಬಗ್ಗೆ ಪರೀಕ್ಷೆ ನಡೆಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಿಷನ್ ಏಡ್ಸ್ ಸುರಕ್ಷಾ ಅಭಿಯಾನದ ಗುರಿಗಳನ್ನು ಜಿಲ್ಲಾಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಡ್ರಗ್ಸ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗಿದ್ದು, ಈ ನಿಟ್ಟಿನಲ್ಲಿ ಮಿಷನ್ ಏಡ್ಸ್ ಅಭಿಯಾನದಡಿ ಅಗತ್ಯ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು.
ಜಿಲ್ಲೆಯ ಎಲ್ಲಾ ಖಾಸಗಿ ಕ್ಲಿನಿಕ್, ನರ್ಸಿಂಗ್ ಹೋಂ, ಆಸ್ಪತ್ರೆಗಳು ಎಚ್.ಐ.ವಿ ಪ್ರಕರಣಗಳ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಪ್ರಮುಖ ಜನಸಂದಣಿ ಘಟಕ, ಕೈಗಾರಿಕೆಗಳು, ವಲಸೆ ಕಾರ್ಮಿಕರಲ್ಲಿ ಎಚ್ ಐವಿ ತಪಾಸಣೆ ಬಗ್ಗೆ ಸಹಕರಿಸಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗುವುದು ಎಂದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಖತೀಜಾ ದಿಲ್ಶಾದ್ ಅವರು ಮಾತನಾಡಿ, ಮಿಷನ್ ಏಡ್ಸ್ ಸುರಕ್ಷಾ ಅಭಿಯಾನದ ಅಡಿ, ಎಚ್.ಐ.ವಿ ಬಾಧಿತರ ಪೈಕಿ ಶೇ 95 ರಷ್ಟು ಮಂದಿಗೆ ತಮ್ಮ ಎಚ್.ಐವಿ ಸ್ಥಿತಿಯ ಬಗ್ಗೆ ಅರಿವು ಮೂಡಿಸುವುದು, ಸೂಕ್ತ ಚಿಕಿತ್ಸೆ ಪಡೆದು ಮತ್ತು ವೈರಸ್ ನಿಯಂತ್ರಿಸುವುದು ಆದ್ಯತೆ ಆಗಿರುತ್ತದೆ. ಜಿಲ್ಲೆಯಲ್ಲಿ ಮಾರ್ಚ್ ಅಂತ್ಯದವರೆಗೆ ಎಚ್.ಐ.ವಿ ಭಾಧಿತರಲ್ಲಿ ಶೇ 85.23 ರಷ್ಟು ಮಂದಿ ಚಿಕಿತ್ಸೆ ಪಡೆದಿದ್ದಾರೆ ಎಂದರು.
ಜಿಲ್ಲೆಯಲ್ಲಿ 21 ಕೌನ್ಸಿಲಿಂಗ್ ಮತ್ತು ಪರೀಕ್ಷಾ ಕೇಂದ್ರಗಳು, 9 ಎ.ಆರ್.ಟಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ 4663 ಎಚ್.ಐ.ವಿ ಸಕ್ರಿಯ ಪ್ರಕರಣಗಳು ಇವೆ. ಕಳೆದ ವರ್ಷ ಜಿಲ್ಲೆಯಲ್ಲಿ 84893 ಎಚ್.ಐ.ವಿ ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ 293 ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿದೆ. ಇದೂವರೆಗೆ ಜಿಲ್ಲೆಯಲ್ಲಿ ಹೆಚ್.ಐ.ವಿ ಯಿಂದ 2972 ಮರಣ ಪ್ರಕರಣಗಳು ವರದಿ ಆಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ, ದ.ಕ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ್ , ಎಡಿಸಿ ರಾಜು ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಇದ್ದರು.





