
ಪಣಜಿ: ಗೋವಾದ ಬಿರ್ಚ್ ಬೈ ರೆಮೆಯೊ ಲೇನ್ ಕ್ಲಬ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನ ಆಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸುಟ್ಟುಗಾಯಗಳು ಮತ್ತು ಉಸಿರುಗಟ್ಟಿ ಸುಮಾರು 25 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
ಉತ್ತರ ಗೋವಾದ ಅರ್ಪೋರಾ ಪ್ರದೇಶದಲ್ಲಿದ್ದ ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ದುರಂತಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತನಿಖೆ ಕೈಗೊಳ್ಳುವಂತೆ ಸಿಎಂ ಆದೇಶ ಹೊರಡಿಸಿದ್ದಾರೆ.
ಘಟನೆಯಲ್ಲಿ ಕನಿಷ್ಠ 25 ಮಂದಿ ಮೃತಪಟ್ಟು, 50 ಮಂದಿ ಗಾಯಗೊಂಡಿದ್ದಾರೆ. ಮೃತರ ಪೈಕಿ ಹೆಚ್ಚಿನವರು ನೈಟ್ ಕ್ಲಬ್ ಸಿಬ್ಬಂದಿ ಎಂದು ತಿಳಿದು ಬಂದಿದೆ.
ಪ್ರಧಾನಿ ಪರಿಹಾರ ಘೋಷಣೆ
ಗೋವಾದ ನೈಟ್ ಕ್ಲಬ್ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂಪಾಯಿಗಳ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.


