ಬೆಂಗಳೂರು: ಕಾರವಾರದಲ್ಲಿ 198 ಕೋಟಿ ರೂಪಾಯಿ ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಉತ್ತರ ಕನ್ನಡ ಜಿಲ್ಲೆಯ ಬಹುದಿನಗಳ ಬೇಡಿಕೆಗೆ ಕೊನೆಗೂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಅಸ್ತು ಎಂದಿದ್ದಾರೆ. ರಾಯಚೂರಿನಲ್ಲಿ 10 ಕೋಟಿ ರೂ. ವೆಚ್ಚದ ಟ್ರಾಮಾ ಕೇರ್ ಕೇಂದ್ರ ಮತ್ತು ಮೈಸೂರು ಹಾಗೂ ತುಮಕೂರಿನಲ್ಲಿ 92 ಕೋಟಿ ರೂ. ವೆಚ್ಚದ ಪೆರಿಫೆರಲ್ ಕ್ಯಾನ್ಸರ್ ಕೇಂದ್ರಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.
236 ಕೋಟಿ ರೂ. ವೆಚ್ಚದ ಹುಬ್ಬಳ್ಳಿಯ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆಗೊಳಿಸಲಾಗುವುದು. ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಆವರಣದಲ್ಲಿ ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ 1,000 ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಮತ್ತು ಅಂಗಾಂಗ ಕಸಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ ಎಂದು ಸಿಎಂ ತಿಳಿಸಿದರು.



