ರಾಜ್ಯ ಬಜೆಟ್: ಆರೋಗ್ಯ ಇಲಾಖೆಗೆ ಡಿಜಿಟಲ್ ಟಚ್, ಭರಪೂರ್ ಯೋಜನೆಗಳ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು2026–27 ಸಾಲಿನ ಬಜೆಟ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಘೋಷಣೆ ಮಾಡಿದ್ದಾರೆ. ತಾಯಂದಿರ ಮತ್ತು ಮಕ್ಕಳ ಆರೋಗ್ಯ, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿ, ಹೊಸ ವೈದ್ಯಕೀಯ ಕಾಲೇಜುಗಳು ಹಾಗೂ ಡಿಜಿಟಲ್ ಆರೋಗ್ಯ ವ್ಯವಸ್ಥೆಗಳಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿಲಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಆರಂಭಿಸಿದ ತಡೆಗಟ್ಟಬಹುದಾದ ತಾಯಂದಿರ ಮರಣ ಶೂನ್ಯಗೊಳಿಸುವ ಅಭಿಯಾನದ ಪರಿಣಾಮವಾಗಿ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವು ಶೇ 24ರಷ್ಟು ಇಳಿಕೆಯಾಗಿದೆ. ಈ ಯೋಜನೆಯಡಿ ಪ್ರತಿಯೊಂದು ತಾಯಂದಿರ ಮರಣ ಪ್ರಕರಣವನ್ನು ತಜ್ಞರ ಸಮಿತಿ ವಿಶ್ಲೇಷಿಸಿ ಗರ್ಭಿಣಿ ಮಹಿಳೆಯರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ.

ಮಕ್ಕಳ ಆರೋಗ್ಯಕ್ಕೆ ವಿಶೇಷ ಯೋಜನೆ: “ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ” ಯೋಜನೆಯಡಿ ಶಾಲೆ ಹಾಗೂ ಕಾಲೇಜುಗಳ 52 ಲಕ್ಷ ಮಕ್ಕಳಿಗೆ ರಕ್ತಹೀನತೆ ತಪಾಸಣೆ ನಡೆಸಲಾಗಿದೆ. ಇದರಲ್ಲಿ 11.7 ಲಕ್ಷ ಮಕ್ಕಳಿಗೆ ರಕ್ತಹೀನತೆ ಪತ್ತೆಯಾಗಿದ್ದು, ಅವರಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ. ಈಗಾಗಲೇ 3.7 ಲಕ್ಷ ಮಕ್ಕಳು ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಹೃದಯ ರೋಗಿಗಳಿಗೆ ನೆರವು: ಸ್ಟೆಮಿ ಕಾರ್ಯಕ್ರಮದಡಿ 9.4 ಲಕ್ಷ ಇಸಿಜಿ ಪರೀಕ್ಷೆಗಳನ್ನು ನಡೆಸಲಾಗಿದ್ದು, 13,933 ತೀವ್ರ ಹೃದಯಾಘಾತ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 7,668 ಮಂದಿಗೆ ತಕ್ಷಣ ಚಿಕಿತ್ಸೆ ನೀಡಲಾಗಿದೆ.

ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ 900 ಕೋಟಿ: ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸಲು ಸರ್ಕಾರ ಮುಂದಾಗಿದೆ. ಆರೋಗ್ಯ ಇಲಾಖೆಯ ಮೂಲಸೌಕರ್ಯ ಅಭಿವೃದ್ಧಿಗೆ ಈ ಸಾಲಿನಲ್ಲಿ ₹900 ಕೋಟಿ ಅನುದಾನ ನೀಡಲಾಗಿದೆ.

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ: ಆಯುಷ್ಮಾನ್ ಭಾರತ್– ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ಪ್ಯಾಕೇಜ್ ದರಗಳನ್ನು ಪರಿಷ್ಕರಿಸಿ ಹೊಸ ದರಗಳನ್ನು ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ. ಬಡ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರಕುವ ಉದ್ದೇಶದಿಂದ ₹400 ಕೋಟಿ ಹೆಚ್ಚುವರಿ ಅನುದಾನ ಮೀಸಲಿಡಲಾಗಿದೆ.

ಟ್ರಾಮಾ ಕೇರ್ ಸೇವೆಗಳ ವಿಸ್ತರಣೆ: ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಸಮಗ್ರ ಟ್ರಾಮಾ ಕೇರ್ ಸೇವೆಗಳನ್ನು ಒದಗಿಸಲು ತುರ್ತು ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ ಮತ್ತು ಐಸಿಯುಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಇದಕ್ಕಾಗಿ 45 ಕೋಟಿ ಮೀಸಲಿಡಲಾಗಿದೆ.

ಪೌಷ್ಟಿಕ ಪುನಃಶ್ಚೇತನ ಕೇಂದ್ರಗಳ ವಿಸ್ತರಣೆ: ತೀವ್ರ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಚಿಕಿತ್ಸೆ ನೀಡಲು ಈಗಾಗಲೇ 86 ತಾಲ್ಲೂಕುಗಳಲ್ಲಿ ಎನ್ ಆರ್ಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಉಳಿದ 63 ತಾಲ್ಲೂಕುಗಳಲ್ಲಿ ಹೊಸ ಕೇಂದ್ರಗಳನ್ನು ಸ್ಥಾಪಿಸಲು 6 ಕೋಟಿ ಅನುದಾನ ನೀಡಲಾಗಿದೆ.

ಮಕ್ಕಳಿಗೆ ಉಚಿತ ಇನ್ಸುಲಿನ್: ಟೈಪ್-1 ಮಧುಮೇಹದಿಂದ ಬಳಲುತ್ತಿರುವ 18 ವರ್ಷದೊಳಗಿನ ಮಕ್ಕಳಿಗೆ ಉಚಿತ ಇನ್ಸುಲಿನ್ ಪೆನ್ ಗಳನ್ನು ನೀಡುವ ಯೋಜನೆಯನ್ನು ಸರ್ಕಾರ ಘೋಷಿಸಿದೆ.

ಡಯಾಲಿಸಿಸ್ ಸೇವೆಗಳ ವಿಸ್ತರಣೆ: ರಾಜ್ಯದ 50 ಕೇಂದ್ರಗಳಲ್ಲಿ 150 ಹಾಸಿಗೆ ಸಾಮರ್ಥ್ಯ ಹೆಚ್ಚಿಸಿ ವರ್ಷಕ್ಕೆ 1.35 ಲಕ್ಷ ಡಯಾಲಿಸಿಸ್ ಸೇವೆ ನೀಡಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ 20 ಕೋಟಿ ಅನುದಾನ ಮೀಸಲಿಡಲಾಗಿದೆ.

ಆರೋಗ್ಯ ಕ್ಷೇತ್ರದಲ್ಲಿ ಡಿಜಿಟಲ್ ವ್ಯವಸ್ಥೆ: ಡಿಜಿಟಲ್ ಆರೋಗ್ಯ ಕಾರ್ಯಕ್ರಮದಡಿ “ಸಮಸ್ತ” ಮೊಬೈಲ್ ಅಪ್ಲಿಕೇಶನ್ ಮೂಲಕ ಆರೋಗ್ಯ ಸಿಬ್ಬಂದಿಯ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತದೆ. ಜೊತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಗಣಕೀಕೃತ ನೋಂದಣಿ, ಆರೋಗ್ಯ ದಾಖಲೆಗಳ ಡಿಜಿಟಲೀಕರಣ ಹಾಗೂ ಯುಪಿಐ ಆಧಾರಿತ ಪಾವತಿ ವ್ಯವಸ್ಥೆ ಜಾರಿಗೆ ಬರಲಿದೆ.

2,500 ಹುದ್ದೆಗಳ ಭರ್ತಿ : ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸರ್ಕಾರ ಘೋಷಿಸಿದೆ.

ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೂ ಒತ್ತು: ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಸೌಕರ್ಯವನ್ನು ಬಲಪಡಿಸಲು ಸರ್ಕಾರ ಹಲವು ಯೋಜನೆಗಳನ್ನು ಪ್ರಕಟಿಸಿದೆ.

ಕಾರವಾರದಲ್ಲಿ198 ಕೋಟಿ ವೆಚ್ಚದ 450 ಹಾಸಿಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರ ಕಟ್ಟಡ ಲೋಕಾರ್ಪಣೆ, ಬೆಂಗಳೂರಿನಲ್ಲಿ 1,000 ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒಪ್ಪಂದ, ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 400 ಹಾಸಿಗೆಯಿಂದ 600 ಹಾಸಿಗೆಗಳಿಗೆ ಮೇಲ್ದರ್ಜೆ, ವಿಜಯಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಡಿಪಿಆರ್ , ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಇದಲ್ಲದೆ, ಬೆಂಗಳೂರಿನ ಪ್ರಸಿದ್ಧ ವಿಕ್ಟೋರಿಯಾ ಆಸ್ಪತ್ರೆಯನ್ನು “ಶಾಂತವೇರಿ ಗೋಪಾಲಗೌಡ ಆಸ್ಪತ್ರೆ” ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಲಾಗಿದೆ.

ಸರ್ಕಾರ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ 620 ಕೋಟಿ ಹಾಗೂ ಉಪಕರಣಗಳ ಖರೀದಿಗೆ 220 ಕೋಟಿ ಅನುದಾನ ಮೀಸಲಿಟ್ಟಿದೆ.

Leave a Reply

Your email address will not be published. Required fields are marked *