ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿವ ನೀರಿನ ಸಮಸ್ಯೆ ಕಂಡು ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳ ಪಟ್ಟಿಯನ್ನು ಮುಂಚಿತವಾಗಿ ಸಿದ್ದಪಡಿಸಿಕೊಂಡು ಆ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್ ಸೇರಿದಂತೆ ಪರ್ಯಾಯ ನೀರಿನ ವ್ಯವಸ್ಥೆಗೆ ಅಗತ್ಯ ಸಿದ್ದತೆಗಳನ್ನು
ಕೈಗೊಳ್ಳುವಂತೆ ತಿಳಿಸಿದ ಅವರು ಜಿಲ್ಲೆಯಲ್ಲಿ ಹೊಸ ಬೋರ್‌ವೆಲ್ ಕೊರೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ವೈಜ್ಞಾನಿಕವಾಗಿ ಅಂತರ್ಜಲ ಮರುಪೂರಣ ವ್ಯವಸ್ಥೆ ಅವಡಿಸಿಕೊಂಡಲ್ಲಿ ಮಾತ್ರ ಅನುಮತಿ ನೀಡುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ದುಸ್ಥಿತಿಯಲ್ಲಿ ಇರುವ ಮಳೆಮಾಪನ ಯಂತ್ರಗಳು ದುರಸ್ತಿ/ ಹೊಸದಾಗಿ ಅಳವಡಿಕೆಯಾಗುವ ವರೆಗೆ ಬೆಳೆ ವಿಮೆ ಪಾವತಿಗೆ ಈ ಹಿಂದಿನMತೆ ಗ್ರಾಮ ಪಂಚಾಯತ್‌ಗಳಲ್ಲಿ ಅಳವಡಿಸಿರುವ ಮ್ಯಾನ್ಯುಯಲ್ ಗೇಜ್ ಯಂತ್ರಗಳ ಮಾಪನವನ್ನು ವಿಮಾ ಪರಿಹಾರದ ಮೊತ್ತ ಪಾವತಿಗೆ ಪರಿಗಣಿಸುವ ಕುರಿತಂತೆ ಜಿಲ್ಲೆಯ ತೋಟಗಾರಿಕಾ ಇಲಾಖೆ ಮೂಲಕ ಇಲಾಖೆಯ ಕೇಂದ್ರ ಕಚೇರಿಗೆ ಪತ್ರ ಬರೆಯುವಂತೆ ತಿಳಿಸಿದರು.
ಮುಂಡಗೋಡು ನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ರಲ್ಲಿ ಪರೀಕ್ಷೆ ಬರೆಯಲು ಅಗತ್ಯವಿರುವ ಎಲ್ಲಾ ರೀತಿಯ ನೆರವು ಮತ್ತು ಪ್ರೋತ್ಸಾಹ ನೀಡುವ ಮೂಲಕ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಅವರು ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಿ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಗ್ಯಾಸ್ ಸಿಲೆಂಡರ್ ಸಮಸ್ಯೆಯಿಂದ ಜಿಲ್ಲೆಯಲ್ಲಿ ಬಿಸಿಯೂಟ ಯೋಜನೆಗೆ ಯಾವುದೇ ಸಮಸ್ಯೆಯಾಗಿಲ್ಲವೆಂದು ಹಾಗೂ ಅಕ್ಷರ ದಾಸೋಹ ಸಿಬ್ಬಂದಿಗಳಿಗೆ ಇಡುಗಂಟು ಸೌಲಭ್ಯವನ್ನು ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಆರೋಗ್ಯ ಕೇಂದ್ರಗಳು ಮತ್ತು ಅಂಗನವಾಡಿಗಳ ಕಟ್ಟಡ ನಿರ್ಮಾಣದ ಬಾಕಿ ಇರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಕ್ತಾಯಗೊಳಿಸುವಂತೆ ಸೂಚಿಸಿದ ಅವರು, ಆರೋಗ್ಯ ಇಲಾಖೆಯಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಪರಿಕರಗಳನ್ನು ಖರೀದಿಸುವಂತೆ ಮತ್ತು ಎಲ್ಲಾ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಸೂಚಿಸಿದರು.
ಜಲ ಜೀವನ್ ಮಿಷನ್ ಅಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವಂತೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ಅಂತರ್ಜಲ ವೃಧ್ದಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಣ್ಣ ನೀರಾವರಿ ಇಲಾಖೆ ಮತ್ತು ಕೃಷಿ ಇಲಾಖೆವತಿಯಿಂದ ನಿರ್ಮಿಸಿರುವ ನೀರು ಸಂಗ್ರಹ ಕಾಮಗಾರಿಗಳ ಸ್ಥಳಗಳನ್ನು ಮ್ಯಾಪಿಂಗ್ ಮಾಡುವಂತೆ ನಿರ್ದೇಶಿಸಿದರು.
ಪ್ರಸಕ್ತ ಸಾಲಿನಲ್ಲಿ ಜಿ.ಪಂ. ಅಧೀನದ ಎಲ್ಲಾ ಇಲಾಖೆಗಳು ತಮಗೆ ನೀಡಿದ ಅನುದಾನವನ್ನು ಸಮರ್ಪಕವಾಗಿ ಮತ್ತು ಸಂಪೂರ್ಣವಾಗಿ ಬಳಕೆ ಮಾಡಿರುವ ಬಗ್ಗೆ ಮತ್ತು ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಜಿಲ್ಲಾ ಪಂಚಾಯತ್ ನ ಎಲ್ಲಾ ಶಾಖಾ ಮುಖ್ಯಸ್ಥರು ಮತ್ತು ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು ಹಾಜರಿದ್ದರು.





