ಬೆಂಗಳೂರು: ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹೈಕೋರ್ಟ್‌ನಿಂದ ಬಾರಿ ಹಿನ್ನಡೆ ಉಂಟಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 ಎ ಅಡಿಯಲ್ಲಿ ತನಿಖೆಗೆ ಕೂಡಲೇ ಅನುಮತಿ ನೀಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿಗೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಭ್ರಷ್ಟಾಚಾರದ ಕುರಿತು ಅತ್ಯಂತ ಕಠಿಣ ಮಾತುಗಳಲ್ಲಿ ಎಚ್ಚರಿಕೆ ನೀಡಿದ್ದು, ಭ್ರಷ್ಟಾಚಾರ ಎನ್ನುವುದು ಕ್ಯಾನ್ಸರ್ ಮತ್ತು ಪ್ಲೇಗ್ ಇದ್ದಂತೆ ಎಂಬ ಸುಪ್ರೀಂ ಹೇಳಿಕೆ ಉಲ್ಲೇಖ ಮಾಡಿದ ಪೀಠವು , ಭ್ರಷ್ಟಾಚಾರವನ್ನು ಹಾಗೆಯೇ ಬಿಟ್ಟರೆ ಅದು ವ್ಯವಸ್ಥೆಯನ್ನೇ ಅಸ್ಥಿರಗೊಳಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿತು.
ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಲಕ್ಷಾಂತರ ಸಂಖ್ಯೆಯ ಬಟ್ಟೆ ಬ್ಯಾಗ್‌ಗಳನ್ನು ದುಬಾರಿ ಬೆಲೆಗೆ ಖರೀದಿಸಿ, ಅದರಲ್ಲಿ ಸರ್ಕಾರದ ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ದೂರು ಕೇಳಿಬಂದಿತ್ತು. ಈ ಹಗರಣದ ತನಿಖೆಗೆ ಈ ಹಿಂದೆ ತಾಂತ್ರಿಕ ಕಾರಣಗಳಿಂದ ಹಿನ್ನಡೆಯಾಗಿತ್ತು, ಆದರೆ ಈಗ ಹೈಕೋರ್ಟ್ ಅಸ್ತು ಎಂದಿರುವುದು ತನಿಖೆಗೆ ಬಲ ಬಂದಂತೆ ಆಗಿದೆ.





