ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಿಧಾನ ಪರಿಷತ್ ಹಿರಿಯ ಸದಸ್ಯ ನಸೀರ್ ಅಹ್ಮದ್ ಅವರನ್ನು ವಜಾ ಮಾಡಲಾಗಿದೆ.
ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದ್ದು, ಅವರನ್ನು ಈ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸರಕಾರದ ಉಪ ಕಾರ್ಯದರ್ಶಿ ಅಭಿಜಿನ್ ಬಿ. ಅಧಿಸೂಚನೆ ಹೊರಡಿಸಿದ್ದಾರೆ.
ದಾವಣಗೆರೆ ಉಪ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡದೇ ಇರುವ ಕಾರಣಕ್ಕೆ ಪಕ್ಷದ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಪರ ಪ್ರಚಾರದಿಂದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರೂ ಆಗಿದ್ದ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅವರು ದೂರ ಉಳಿದಿದ್ದರು.
ನಂತರದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅಬ್ದಲ್ ಜಬ್ಬಾರ್ ಅವರು, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಮಧ್ಯೆ ನಸೀರ್ ಅಹ್ಮದ್ ಅವರಿಗೂ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿತ್ತು.





